
ಸರಕಾರಿ ಜಾಗವನ್ನು ಧರ್ಮದ ಹೆಸರಿನಲ್ಲಿ ಒತ್ತುವರಿ ಮಾಡುವುದಕ್ಕೆ ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಕೋಲಾರ ಜಿಲ್ಲೆಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲಾ ಕಾಂಪೌಂಡ್ ಹಾಗೂ ರಸ್ತೆಯ ಜಾಗದಲ್ಲಿ ನಿರ್ಮಿಸಿರುವ ಮಳಿಗೆಗಳ ತೆರವಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಬೆಂಗಳೂರು: ಧರ್ಮದ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ಗೆ ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ವೇಳೆ ಖಡಕ್ ಎಚ್ಚರಿಕೆ ನೀಡಿದೆ.
ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ ಸರಕಾರಿ ಜಾಗದಲ್ಲಿ ನಿರ್ಮಿಸಿರುವ ಮಳಿಗೆಗಳ ತೆರವಿಗೆ ತಹಸೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟಬಲ್ ಟ್ರಸ್ಟ್ ಹಾಗೂ ಜಾಮೀಯಾ ಮಸ್ಜಿದ್ ಸಮಿತಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ಈ ರೀತಿ ಮೌಖಿಕವಾಗಿ ಹೇಳಿದೆ.





